ಮುಂಬರುವ ಜಿಲ್ಲಾ ಪಂಚಾಯಿತಿ ಮತ್ತು ತಾಲ್ಲೂಕು ಪಂಚಾಯಿತಿ ಚುನಾವಣೆಗೆ ಬಿಜೆಪಿ–ಜೆಡಿಎಸ್ ಮೈತ್ರಿಕೂಟ ಸಿದ್ಧತೆ ಚುರುಕುಗೊಳಿಸಿದೆ. ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಮತ್ತು ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ದೆಹಲಿಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿಯಾಗಿ ಚರ್ಚಿಸಿದರು.
ಸೀಟು ಹಂಚಿಕೆ, ಜಂಟಿ ಪ್ರಚಾರ ಮತ್ತು ತಳಮಟ್ಟದ ಸಂಘಟನೆ ಕುರಿತು ಮಾತುಕತೆ ನಡೆದಿದೆ ಎನ್ನಲಾಗಿದೆ. ರಾಜ್ಯದ ರಾಜಕೀಯ ಪರಿಸ್ಥಿತಿ ಬಗ್ಗೆ ವಿಜಯೇಂದ್ರ ಅವರು ಶಾ ಅವರಿಗೆ ಮಾಹಿತಿ ನೀಡಿದರು.
2028ರ ವಿಧಾನಸಭಾ ಚುನಾವಣೆಗೆ ಸ್ಥಳೀಯ ಸಂಸ್ಥೆಗಳ ಫಲಿತಾಂಶ ದಿಕ್ಸೂಚಿಯಾಗಬಹುದು ಎಂಬ ಕಾರಣಕ್ಕೆ ಎರಡೂ ಪಕ್ಷಗಳು ಈ ಚುನಾವಣೆಯನ್ನು ಗಂಭೀರವಾಗಿ ಪರಿಗಣಿಸಿವೆ.




